ಗದಗ: ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಕಾಲ ಕೂಡಿಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್‌ಗಿಂದು ಅಡ್ವಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು (ಫೆಬ್ರವರಿ 17) ನಡೆದಿದ್ದು, ಈ ವೇಳೆ ಅಡ್ವಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಸ್ಪಷ್ಟಪಡಿಸಿದರು.ಈ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.

ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡು ಹೈಕೋರ್ಟ್, ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹೇಳಿದರು.
ಬಳಿಕ ಇದಕ್ಕೆ ಅಡ್ವಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸ್ಪಷ್ಟಪಡಿಸಿದರು. ಏನೆ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು ಎಂದು ತಿಳಿಸಿದರು.
ಸರ್ಕಾರದ ಅಡ್ವಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಈ ಹೇಳಿಕೆಯನ್ನು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.
ಈ ಮೂಲಕ ನನೆಗುದಿಗೆ ಬಿದ್ದಿದ್ದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆ ಕಾಲ ಕೂಡಿಬಂದಂತಿದೆ.
ಇನ್ನು ಈ ಸಂಬಂಧ ನಿನ್ನೆ (ಫೆಬ್ರವರಿ 16) ಅಷ್ಟೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಾಗಿ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಸರ್ಕಾರ ಪರ ವಕೀಲರು ಮೇ ತಿಂಗಳ ನಂತರ ಚುನಾವಣೆ ನಡೆಸುವುದಾಗಿ ಹೇಳಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.