ಗದಗ, ಜೂನ್ 30:ವಸತಿ ಖಾತೆಯಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾ ಮಾಡಬೇಕೆಂಬ ಘೋಷಣೆಗಳೊಂದಿಗೆ, ಗದಗ ಜಿಲ್ಲಾ ಜೆಡಿಎಸ್ ಘಟಕ ಪ್ರತಿಭಟನೆ ನಡೆಸಿತು.
ನಗರದ ಮಹಾತ್ಮಾ ಗಾಂಧಿ ಸರ್ಕಲ್ ಬಳಿ ನಡೆದ ಈ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಜಮೀನರ್ ಗೆ Money ಕೊಟ್ಟರೆ ಮನೆ” ಎಂಬ ಬೋರ್ಡ್ಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಸಚಿವ ಜಮೀರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡರ್ ನೇತೃತ್ವ ವಹಿಸಿದ್ದರು. ಈ ವೇಳೆ ಮಾತನಾಡಿದ ಅವರು,“ವಸತಿ ಖಾತೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸ್ವತಃ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ. ಆರ್ ಪಾಟೀಲ ಅವರೇ ಈ ಕುರಿತು ಬಹಿರಂಗ ಹೇಳಿಕೆ ನೀಡಿದ್ದಾರೆ. ಸರಕಾರ ಸಹ ಈ ಬಗ್ಗೆ ಮೌನವಾಗಿದೆ ಎಂದರೆ, ಇಡೀ ಸರ್ಕಾರವೇ ಈ ವಿಚಾರದಲ್ಲಿ ಆರೋಪಿ ಸ್ಥಾನದಲ್ಲಿ ನಿಂತಿದೆ ಎಂದೇ ಅರ್ಥ. ಹೀಗಾಗಿ ತಕ್ಷಣ ವಸತಿ ಸಚಿವ ಜಮೀರ್ ಅಹ್ಮದ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಇಲ್ಲದಿದ್ರೆ, ಸರ್ಕಾರ ಅವರನ್ನ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಈ ಕುರಿತಂತೆ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿಯನ್ನೂ ಸಲ್ಲಿಸಲಾಯಿತು. ಈ ವೇಳೆ ಜೆಡಿಎಸ್ ಪಕ್ಷದ ಜಿಲ್ಲಾ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
