ಗದಗ: ನಗರದಲ್ಲಿ ನಿರ್ಮಾಣಗೊಂಡಿರುವ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 12ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿದ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಮಾಹಿತಿ ನೀಡಿದರು.
“ಹಾಲಕೆರೆ ಅನ್ನದಾನೇಶ್ವರ ಮಹಾಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಶ್ರೀಗಳ ಸಂಕಲ್ಪದ ಮೇರೆಗೆ ಗದಗ ನಗರದಲ್ಲಿ ಶಿಕ್ಷಣ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ನೂತನ ಅಧ್ಯಾಯ ಆರಂಭವಾಗುತ್ತಿದೆ. ಇದರ ಅಂಗವಾಗಿ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಆನಂದಾಶ್ರಮ ಕಟ್ಟಡ ನಿರ್ಮಾಣಗೊಂಡಿದೆ. ಸಮಾರಂಭದಲ್ಲಿ ಹಲವಾರು ಗಣ್ಯ ಧರ್ಮಗುರುಗಳು ಹಾಗೂ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ” ಎಂದು ಹೇಳಿದರು.
ಧಾರ್ಮಿಕ ಗುರುಗಳ ಸಾನ್ನಿಧ್ಯ..
ಸುತ್ತೂರು ಕ್ಷೇತ್ರದ ವೀರಸಿಂಹಾಸನ ಮಹಾಸಂಸ್ಥಾನಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನೂತನ ಮಹಾವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ಒಳಬಳ್ಳಾರಿಯ ಸುವರ್ಣಗಿರಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಆನಂದಾಶ್ರಮ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮುಂಡರಗಿಯ ಶ್ರೀ ಜ. ಅನ್ನದಾನೀಶ್ವರ ಸ್ವಾಮೀಜಿ ವಿಶೇಷ ಸಾನ್ನಿಧ್ಯ ವಹಿಸಲಿದ್ದಾರೆ.
ಇದೇ ವೇಳೆ ನಂದವಾಡಗಿ ಹಿರೇಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಸಂತೆಕೆಲೂರ ಘನಮಠೇಶ್ವರಮಠದ ಗುರುಬಸವ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರ ನೇತೃತ್ವದಲ್ಲಿ ಧಾರ್ಮಿಕ ಆಶೀರ್ವಚನ ನಡೆಯಲಿದೆ.
ರಾಜಕೀಯ ಗಣ್ಯರ ಹಾಜರಿ
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹಾಗೂ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಮಾರಂಭವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಮಹತ್ವದ ಕಾರ್ಯಕ್ರಮದಲ್ಲಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಶಾಸಕರಾದ ಸಿ.ಸಿ. ಪಾಟೀಲ, ಹಂಪನಗೌಡ ಬಾದರ್ಲಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಅಮರೇಗೌಡ ಬಯ್ಯಾಪೂರ, ಡಿ.ಆರ್. ಪಾಟೀಲ ಹಾಜರಾಗುವರು ಎಂದು ಆಯೋಜಕರು ತಿಳಿಸಿದ್ದಾರೆ.
ಸಂಸ್ಥೆಯ ಶಿಕ್ಷಣ ಸೇವಾ ಚಟುವಟಿಕೆ
ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ವೈ.ಸಿ. ಪಾಟೀಲ ಅವರು ಮಾತನಾಡಿ, “ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯು ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ವಸತಿ ಸೌಲಭ್ಯಕ್ಕಾಗಿ ಮುಂದಾಳತ್ವ ವಹಿಸಿದೆ. ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯ ಮೂಲಕ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹದ ಜೊತೆಗೆ ಉಚಿತ ಅನ್ನದಾಸೋಹವನ್ನೂ ನಿರಂತರವಾಗಿ ನೀಡಲಾಗುತ್ತಿದೆ” ಎಂದು ವಿವರಿಸಿದರು.
ಆಯೋಜನಾ ಸಮಿತಿ
ಕಾರ್ಯಕ್ರಮದ ಯಶಸ್ಸಿಗಾಗಿ ಆಡಳಿತಾಧಿಕಾರಿ ಎನ್.ಆರ್. ಗೌಡರ, ನಿಂಗರಾಜ ಬೇವಿನಕಟ್ಟಿ, ಜೆ.ಎನ್. ಪಾಟೀಲ, ಬಿ.ಎನ್. ಪಾಟೀಲ ಹಾಗೂ ವಿದ್ಯಾಸಾಗರ ಸೇರಿದಂತೆ ಅನೇಕರು ತೊಡಗಿಸಿಕೊಂಡಿದ್ದಾರೆ.