ಶಿರಹಟ್ಟಿ: ಶಿರಹಟ್ಟಿ ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಯ FDA ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ವಿವರಗಳ ಪ್ರಕಾರ, ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ FDA ಎಸ್.ಎಸ್. ಚೌತಾಯಿ ಅವರು ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಬಿ. ಲಕ್ಷ್ಮೇಶ್ವರ ಅವರಿಂದ ಸೇವಾ ಪುಸ್ತಕವನ್ನು ಮಹಾಲೇಖಪಾಲಕರ ಕಚೇರಿ, ಬೆಂಗಳೂರು ಕಳುಹಿಸುವ ನೆಪದಲ್ಲಿ ₹4,000 ಲಂಚ ಬೇಡಿಕೆ ಇಟ್ಟಿದ್ದರು.
ಈ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ದೂರು ಆಧಾರವಾಗಿ ಲೋಕಾಯುಕ್ತ ಅಧಿಕಾರಿಗಳು ಸೂಕ್ತ ಬಲೆ ಹಾಕಿ ಕಾರ್ಯಾಚರಣೆ ನಡೆಸಿದರು. ಲೋಕಾಯುಕ್ತ DYSP ವಿಜಯ ಬಿರಾದಾರ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, FDA ರೆಡ್ ಹ್ಯಾಂಡ್ ಆಗಿ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ.
ಘಟನೆಯ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.