ಗದಗ : ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ವರದಿ : ಪರಮೇಶ ಎಸ್ ಲಮಾಣಿ.
ಸವಣೂರು ಕಡೆಯಿಂದ ಲಕ್ಷ್ಮೇಶ್ವರ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಲಕ್ಷ್ಮೇಶ್ವರದಿಂದ ಗೋವನಾಳ ಗ್ರಾಮಕ್ಕೆ ಹೊರಟಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯನ್ನು ಗೋವನಾಳ ಗ್ರಾಮದ ನಿವಾಸಿ ಪ್ರಕಾಶ್ ಮ್ಯಾಗೇರಿ (ವಯಸ್ಸು ಸುಮಾರು 28 ವರ್ಷ) ಎಂದು ಗುರುತಿಸಲಾಗಿದೆ. ಪ್ರಕಾಶ್ ದಿನನಿತ್ಯದ ಕೆಲಸ ನಿಮಿತ್ತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ನಂತರ ಕ್ಯಾಂಟರ್ ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.
ಯುವಕನ ಅಕಾಲಿಕ ಸಾವಿನಿಂದ ಗೋವನಾಳ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು.
