ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಲಂಚ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮದ್ಯ ಮಾರಾಟಗಾರರು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್ಗಳನ್ನು ಬಂದ್ ಮಾಡಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂ.ಗಳ ಲಂಚ ಸ್ವೀಕಾರದ ವಿಷಯ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ನಾಯಕರು ಮತ್ತು ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಮದ್ಯ ಮಾರಾಟಗಾರರ ಸಂಘ ಭ್ರಷ್ಟಾಚಾರ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 20ರಂದು ಬಂದ್ಗೆ ಕರೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಾಜ್ಯ ಮದ್ಯ ಮಾರಾಟಗಾರರ ಸಂಘದ ಪ್ರದಾನ ಕಾರ್ಯದರ್ಶಿ ಗೋವಿಂದರಾಜ್, ಅಬಕಾರಿ ಇಲಾಖೆಯಲ್ಲಿ ಲಂಚ ಸ್ವೀಕಾರ ಮಿತಿ ಮೀರಿ ಹೋಗಿದೆ. ಇದನ್ನು ಸಹಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ. ಹೀಗಾಗಿ ಇದೇ ನವೆಂಬರ್ 20ರಂದು ರಾಜ್ಯಾದ್ಯಂತ ಎಂಎಸ್‌ಐಎಲ್ ಹೊರತುಪಡಿಸಿ ಮಿಕ್ಕಿದ ಎಲ್ಲಾ ಮದ್ಯ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.