ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ದಿನದಿಂದಲೂ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಯತ್ನಾಳ್ ಗೆ ಶಾಕ್ ಕೊಟ್ಟಿದೆ.
ಹಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ.
ಹತ್ತು ದಿನದ ಒಳಗೆ ಉತ್ತರ ನೀಡುವಂತೆ ಯತ್ನಾಳಗೆ ನೋಟಿಸ್ ನೀಡಿದೆ. ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. 10 ದಿನದೊಳಗೆ ಕಾರಣ ಕೊಡಿ ಎಂದು ಯತ್ನಾಳ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಂಟ್ರಿಕೊಟ್ಟಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.
ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಪ್ತರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ನಿಂದ ಏನು ಉಪಯೋಗ ಇಲ್ಲ. ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ ಎಂದು ಏಕವಚನದಲ್ಲಿ ಕಿಡಿಕಾರಿದ್ದರು. ಇದರ ಬೆನ್ನಲ್ಲೇ ಭಾನುವಾರ ಬೆಂಗಳೂರಿನಲ್ಲಿರುವ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನೆಗೆ ಮಾಜಿ ಶಾಸಕರು ಭೇಟಿ ನೀಡಿ ಯತ್ನಾಳ ಉಚ್ಚಾಟನೆಗೆ ಆಗ್ರಹಿಸಿದ್ದರು. ಇದೀಗ ಕೇಂದ್ರೀಯ ಶಿಸ್ತು ಸಮಿತಿಯು 10 ದಿನದ ಒಳಗಾಗಿ ಕಾರಣ ನೀಡಿ ಎಂದು ಶೋಕಾಸ್ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಶಿಸ್ತು ಸಮಿತಿ ನೋಟಿಸ್ನಲ್ಲೇನಿದೆ?
ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು (ಬಸನಗೌಡ ಪಾಟೀಲ್ ಯತ್ನಾಳ್) ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿಯಾಗಿದೆ.
ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಮುಂದುವರಿದು, ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. ಹತ್ತು ದಿನಗಳ ಒಳಗೆ ಪ್ರತಿಕ್ರಿಯೆ ನೀಡಬೇಕು. ಈ ಸಮಯದೊಳಗೆ ನಿಮ್ಮ ವಿವರಣೆಯನ್ನು ಸಲ್ಲಿಸದಿದ್ದಲ್ಲಿ, ಕೇಂದ್ರ ಶಿಸ್ತು ಸಮಿತಿಯು ನಿಮಗೆ ಹೇಳಲು ಏನೂ ಇರುವುದಿಲ್ಲ. ಈ ವಿಷಯದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಮುಂದುವರಿಯುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ ಎಂದು ಶೋಕಾಸ್ ನೋಟೀಸ್ನಲ್ಲಿ ಉಲ್ಲೇಖಿಸಲಾಗಿದೆ.