ಮುಂಡರಗಿ:
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಆಗಸ್ಟ್ 25, 2025ರ ಸೋಮವಾರದಂದು ರಸ್ತೆ ಸಂಪರ್ಕ ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ.
ವರದಿ: ರಂಗನಾಥ ಕಂದಗಲ್ಲ.ಮುಂಡರಗಿ
ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ಬೆಳೆಗಳಿಗೆ ತಕ್ಷಣ ಪರಿಹಾರ ನೀಡಬೇಕು ಹಾಗೂ ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ ಕಚೇರಿ ಎದುರಿನ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯಲ್ಲಿ ಎತ್ತು ಚಕ್ಕಡಿ ಮೂಲಕ ರಸ್ತೆ ತಡೆ ನಡೆಸಲಾಗುವುದು ಎಂದು ಸಂಘದ ರಾಜ್ಯ ಕಾರ್ಯದರ್ಶಿ ಶಿವಾನಂದ ಇಟಗಿ ಹಾಗೂ ಮುಂಡರಗಿ ತಾಲೂಕು ಅಧ್ಯಕ್ಷ ಶರಣಪ್ಪ ಕಂಬಳಿ ಪತ್ರಿಕಾ ಗೋಷ್ಟಿ ನಡೆಸುವ ಮೂಲಕ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಬಂದು ಬೇಡಿಕೆಗಳ ಮನವಿ ಸ್ವೀಕರಿಸುವವರೆಗೂ ಅನಿರ್ದಿಷ್ಟಾವಧಿ ರಸ್ತೆ ತಡೆ ಮುಂದುವರೆಯುವುದಾಗಿ ಸಂಘದ ನಾಯಕರು ಸ್ಪಷ್ಟಪಡಿಸಿದರು. ಈ ಕುರಿತು ಮುಂಡರಗಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಸಂಘದ ಹಲವು ಪದಾಧಿಕಾರಿಗಳು ಹಾಜರಿದ್ದರು.