ಗದಗ:
ಗದಗ ನಗರದ ಎಪಿಎಂಸಿ ರಸ್ತೆಯಲ್ಲಿ ಇರುವ ಶಾಂತಿ ಚಿತ್ರಮಂದಿರದಲ್ಲಿ ಇಂದು ಬೆಳಿಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಒಳಾಂಗಣ ವ್ಯವಸ್ಥೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಇಂದು ಮಧ್ಯಾಹ್ನ 12 ಗಂಟೆಗೆ ‘ಧುರಂದರ’ ಚಿತ್ರ ಪ್ರದರ್ಶನ ಆರಂಭವಾಗಬೇಕಿದ್ದ ಶಾಂತಿ ಚಿತ್ರಮಂದಿರದಲ್ಲಿ, ಶೋಗೆ ಸಿದ್ಧತೆ ನಡೆಯುತ್ತಿದ್ದ ಸಮಯದಲ್ಲೇ ಅಚಾನಕ್ ಬೆಂಕಿ ಹೊತ್ತಿಕೊಂಡಿದೆ. ಚಿತ್ರಮಂದಿರದ ಒಳಭಾಗದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಹಾಗೂ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಬೆಟಗೇರಿ ಬಡಾವಣೆ ಪೊಲೀಸರ ನೇತೃತ್ವದಲ್ಲಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ತೀವ್ರವಾಗಿದ್ದ ಕಾರಣ ಚಿತ್ರಮಂದಿರದ ಕುರ್ಚಿಗಳು, ಪರದೆಗಳು, ವಿದ್ಯುತ್ ತಂತಿಗಳು ಹಾಗೂ ಇತರ ಒಳಾಂಗಣ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಯಾವ ಅಚಾತುರ್ಯದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬದು ನಿಖರ ಕಾರಣ ತಿಳಿದು ಬಂದಿಲ್ಲ. ಪತ್ತೆಹಚ್ಚಲು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅದೃಷ್ಟವಶಾತ್ ಘಟನೆ ವೇಳೆ ಚಿತ್ರಮಂದಿರದಲ್ಲಿ ಪ್ರೇಕ್ಷಕರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಬೆಂಕಿ ಅವಘಡದಿಂದ ಚಿತ್ರ ಪ್ರದರ್ಶನವನ್ನು ರದ್ದುಪಡಿಸಲಾಗಿದ್ದು, ಚಿತ್ರಮಂದಿರಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
