ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧನಕ್ಕೊಳಗಾಗಿದ್ದ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ತನಿಖೆಗೆ ಸಹಕರಿಸುವಂತೆ ಶರತ್ತು ವಿಧಿಸಿ ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ.
ಸಿಟಿ ರವಿ ಅವರನ್ನು ಸುವರ್ಣ ಸೌಧದ ಬಳಿ ನಿನ್ನೆ (ಡಿಸೆಂಬರ್ 19) ಸಂಜೆ 6.30ರ ಸಂದರ್ಭದಲ್ಲಿ ಬಂಧನ ಮಾಡಲಾಗಿತ್ತು. ಇಂದು ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆ ತರುತ್ತಿದ್ದ ಸಂದರ್ಭದಲ್ಲಿ ಕೋರ್ಟ್ ಆದೇಶ ನೀಡಿದೆ. ಈ ಕೂಡಲೇ ಅವರು ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದೆ. ಆ ಮೂಲಕ ಈ ಪ್ರಕರಣವನ್ನು ತೀವ್ರ ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರು ಉಂಟಾಗಿದೆ.