ಗದಗ:
ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಶಿವರಾತ್ರಿ ಮಹೋತ್ಸವದ ಪವಿತ್ರ ದಿನವೇ ದುಷ್ಕರ್ಮಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಕೃತ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ತುಂಗಭದ್ರಾ ನದಿ ದಂಡೆಯ ಮೇಲಿರುವ ಪುರಾತನ ರಾಮಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಪ್ರತಿಷ್ಠಾಪಿತವಾಗಿದ್ದ ರಾಮಲಿಂಗೇಶ್ವರ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದು, ದೇವಾಲಯದ ಮುಂಭಾಗದಲ್ಲಿದ್ದ ನಂದಿ ವಿಗ್ರಹ ಹಾಗೂ ಸಮೀಪದಲ್ಲಿರುವ ಹೊನ್ನತ್ತೆಮ್ಮನ ಮೂರ್ತಿಗಳನ್ನೂ ಧ್ವಂಸಗೊಳಿಸಿದ್ದಾರೆ.
ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ಗ್ರಾಮಸ್ಥರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಗೆ ಸಿದ್ಧತೆ ನಡೆಸಿದ್ದರು. ದೇವಸ್ಥಾನಕ್ಕೆ ಸುಣ್ಣ, ಬಣ್ಣ ಬಳಿದು ಸ್ವಚ್ಛತೆ ಮಾಡಿ, ಹಬ್ಬದ ಸಂಭ್ರಮಕ್ಕೆ ಸಜ್ಜುಗೊಳಿಸಿದ್ದರು. ಆದರೆ ಭಾನುವಾರ ಮುಂಜಾನೆ ಶಿವರಾತ್ರಿ ಪೂಜೆ ಸಲ್ಲಿಸಲು ಗ್ರಾಮಸ್ಥರು ದೇವಸ್ಥಾನಕ್ಕೆ ಆಗಮಿಸಿದ ವೇಳೆ, ವಿಗ್ರಹಗಳು ಭಗ್ನಗೊಂಡಿರುವ ದೃಶ್ಯ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಈ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ, ಗ್ರಾಮಸ್ಥರು ತಂಡೋಪ ತಂಡವಾಗಿ ದೇವಸ್ಥಾನಕ್ಕೆ ಆಗಮಿಸಿ ದುಷ್ಕರ್ಮಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಪವಿತ್ರ ಶಿವರಾತ್ರಿ ದಿನವೇ ಇಂತಹ ಅಮಾನವೀಯ ಕೃತ್ಯ ನಡೆದಿರುವುದು ಧಾರ್ಮಿಕ ಭಾವನೆಗಳಿಗೆ ಗಂಭೀರವಾಗಿ ಧಕ್ಕೆ ತಂದಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.ವಿಗ್ರಹ ಧ್ವಂಸ ಕೃತ್ಯಕ್ಕೆ ಕಾರಣರಾದವರನ್ನು ತಕ್ಷಣ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನೂ ಯಾರು ಈ ದುಷ್ಕೃತ್ಯ ಎಸಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಪೂರ್ವನಿಯೋಜಿತವಾಗಿ, ಉದ್ದೇಶಪೂರ್ವಕವಾಗಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ದೇವಸ್ಥಾನದ ಆವರಣದಲ್ಲಿ ಭದ್ರತೆ ಕೊರತೆ ಇರುವುದೇ ಇಂತಹ ಘಟನೆಗೆ ಕಾರಣವಾಗಿರಬಹುದು ಎಂಬ ಮಾತುಗಳು ಗ್ರಾಮದಲ್ಲಿ ಕೇಳಿಬರುತ್ತಿವೆ.
ಈ ಕುರಿತು ಗ್ರಾಮಸ್ಥರು ಪೊಲೀಸರಿಗೆ ದೂರು ಸಲ್ಲಿಸಲು ಮುಂದಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸುವ ಮೂಲಕ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಶಿವಭಕ್ತರ ಆರಾಧನಾ ಕೇಂದ್ರವಾಗಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಈ ದುರ್ಘಟನೆ, ಶಿಂಗಟಾಲೂರ ಗ್ರಾಮದಲ್ಲಿ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶದಲ್ಲಿಯೂ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದೇವಸ್ಥಾನಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
