ಸಿದ್ದರಾಮಯ್ಯ ಸಂಪುಟದ ಮತ್ತೊಬ್ಬ ಸಚಿವನ ರಾಜೀನಾಮೆ ಸದ್ದು ರಾಜ್ಯ ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಈ ಹಿಂದೆ ವಾಲ್ಮೀಕಿ ನಿಗಮದ ಹಗರಣದ ಆರೋಪದಲ್ಲಿ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ನೀಡಿದ್ದರು. ಇದೀಗ ಮತ್ತೊಬ್ಬ ಸಚಿವನ ರಾಜೀನಾಮೆ ಪಡೆಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಒಂದೆಡೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೂಡ ಕೇಳಿಬರುತ್ತಿದೆ. ಆದರೆ, ಮತ್ತೊಂದೆಡೆ ಅಬಕಾರಿ ಸಚಿವರ ತಲೆದಂಡವಾಗಲಿದೆ ಎಂದು ಹೇಳಲಾಗುತ್ತಿದೆ. ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು ಸಿದ್ಧತೆಗಳು ನಡೆದಿವೆ ಎಂಬ ಚರ್ಚೆ ನಡೆಯುತ್ತಿದೆ.
ಅಬಕಾರಿ ಇಲಾಖೆಯಲ್ಲಿ ನೂರಾರು ಕೋಟಿ ಹಗರಣ ನಡೆದಿದೆ ಎನ್ನುವ ಆರೋಪವಿದ್ದು, ಇದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ಭಾರಿ ಮುಖಭಂಗ ತಂದೊಟ್ಟಿತ್ತು. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿ, ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡಲು ಮಾಲೀಕರು ಸಹ ಮುಂದಾಗಿದ್ದರು
ಈ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರವನ್ನು ಮಾಲೀಕರು ಎಚ್ಚರಿಸಿದ್ದರು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಕೂಡಲೇ ಆ ಸ್ಥಾನದಿಂದ ಕೆಳಗಿಳಿಸಿ ಎಂದು ಪಟ್ಟು ಹಿಡಿದಿದ್ದರು
ಇನ್ನು ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲೂ ವಿಪಕ್ಷಗಳು ಇದೇ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಇದು ಅಲ್ಲಿನ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ತಲೆತಗ್ಗಿಸುವಂತೆಯೂ ಮಾಡಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಸಚಿವ ಆರ್.ಬಿ.ತಿಮ್ಮಾಪುರ ಅವರು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದು, ಶೀಘ್ರದಲ್ಲೇ ಅವರ ರಾಜೀನಾಮೆ ಪಡೆಯುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.
ಅಲ್ಲದೆ ಸಚಿವ ತಿಮ್ಮಾಪುರ ರಾಜೀನಾಮೆ ಪಡೆಯುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕೂಡ ಸಲಹೆ ನೀಡಿದ್ದು, ನಿನ್ನೆವರೆಗೆ ದೆಹಲಿಯಲ್ಲಿದ್ದ ಸಿದ್ದರಾಮಯ್ಯ ಅವರು ಇದೇ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಅಲ್ಲದೆ ಕರ್ನಾಟದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಮತ್ತೊಂದೆಡೆ ಮಹಾರಾಷ್ಟ್ರ, ಜಾರ್ಖಂಡ್‌ನಲ್ಲೂ ಫಲಿತಾಂಶ ಪ್ರಕಟವಾಗಲಿದೆ. ಇದಾದ ಬಳಿಕ ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆ ಪಡೆಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಆಫ್ ಕರ್ನಾಟಕವು ಇತ್ತೀಚೆಗಷ್ಟೇ ಮದ್ಯದಂಗಡಿಗಳನ್ನು ಬಂದ್ ಮಾಡಿ ಧರಣಿ ನಡೆಸಿತ್ತು. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಒಂದೆರಡು ದಿನ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿತ್ತು. ಸಚಿವರನ್ನು ಬದಲಿಸದಿದ್ದರೆ ರಾಜ್ಯಾದ್ಯಂತ ಎಲ್ಲ ಬಾರ್‌ಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಬಳಿಕ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಈ ಹಿನ್ನೆಲೆ ಧರಣಿಯನ್ನು ಕೈಬಿಟ್ಟಿದ್ದರು.
ಇನ್ನು ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 700 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎನ್ನುವ ಆರೋಪವಿದ್ದು, ಈ ಬಗ್ಗೆ ಬಿಜೆಪಿ ನಾಯಕರು ತಿಮ್ಮಾಪುರ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ರಾಜ್ಯದಲ್ಲಿ ಸಂಗ್ರಹವಾದ ಹಣವನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಳಸಲಾಗಿದೆ ಎಂದೂ ಬಿಜೆಪಿ ಆರೋಪಿಸಿದೆ. ಇದೇ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ.