ಗದಗ: ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆ ಖಂಡಿಸಿ, ಗದಗ ನಗರದಲ್ಲಿ ಪಂಚಮಸಾಲಿ ಸಮಾಜ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಹಳೇ ಡಿಸಿ ಕಚೇರಿ ಸರ್ಕಲ್ ಬಳಿ ನಡೆದ ಈ ಪ್ರತಿಭಟನೆಯಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವೇನು?
ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಹೈಕಮಾಂಡ್ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ಹಿನ್ನೆಲೆ, ಪಂಚಮಸಾಲಿ ಸಮಾಜ ಅಸಮಾಧಾನ ವ್ಯಕ್ತಪಡಿಸಿದೆ. ಯತ್ನಾಳರನ್ನು ಹಿಂದುತ್ವ ಪರ ಧೋರಣೆಗಳು ಮತ್ತು ಸಮಾಜದ ಹಿತಕ್ಕಾಗಿ ಹೋರಾಟ ಮಾಡಿದ್ದಕ್ಕಾಗಿ ಉಚ್ಛಾಟನೆ ಮಾಡಲಾಗಿದೆ ಎಂದು ಸಂಘಟನೆ ಮುಖಂಡರು ಆರೋಪಿಸಿದ್ದಾರೆ.
ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಪ್ರಯತ್ನ
ಪ್ರತಿಭಟನೆ ನಡುವೆ ಪಂಚಮಸಾಲಿ ಸಂಘಟನೆ ಮುಖಂಡರು ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದ ಘಟನೆ ಕೂಡ ಜರುಗಿತು. ಪೊಲೀಸರು ಮಧ್ಯಪ್ರವೇಶಿಸಿ ಕೃತ್ಯವನ್ನು ತಡೆಯುವಲ್ಲಿ ಯಶಸ್ವಿಯಾದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಸಮಾಜದ ಒತ್ತಾಯ
ಪಂಚಮಸಾಲಿ ಮುಖಂಡರು ಯತ್ನಾಳರ ಉಚ್ಛಾಟನೆಯನ್ನ ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದ್ದಾರೆ. ಹಿಂದುತ್ವ ಪರ ನಿಲುವುಗಳನ್ನು ತಳ್ಳಿಹಾಕಲು ಯತ್ನಾಳರನ್ನು ರಾಜಕೀಯವಾಗಿ ತೊಡೆದು ಹಾಕಲಾಗಿದೆ ಎಂದು ಆರೋಪಿಸಿರುವ ಮುಖಂಡರು, ನ್ಯಾಯಕ್ಕಾಗಿ ಹೋರಾಟ ಮುಂದುವರಿಸುದಾಗಿ ತಿಳಿಸಿದ್ರು.