ಮುಂಡರಗಿ: ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್ ಪಾಟೀಲ್, ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಮತ್ತು ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಇದೇ ವೇಳೆ ಬಿಸಿಎಂ ಇಲಾಖೆ ಅಧಿಕಾರಿ ಕಲ್ಮಠ ಅವರನ್ನ ಶಾಸಕ ಚಂದ್ರು ಲಮಾಣಿ ತರಾಟೆಗೆ ತೆಗೆದುಕೊಂಡರು. ಸ್ಥಳಿಯ ಶಾಸಕರ ಗಮನಕ್ಕೆ ತರದೇ,ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಿಸಿಎಂ ಹಾಸ್ಟೆಲ್ ನ್ನ ಉದ್ಘಾಟನೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂದು ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.ಹಾಸ್ಟೆಲ್ ಕಾಮಗಾರಿ ಇನ್ನೂ ಕೂಡ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಿದ್ದರೂ ಅದ್ಹೇಗೆ ಉದ್ಘಾಟನೆ ಮಾಡಿದ್ದೀರಾ ಎಂದು ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದರು.
ನಂತರ ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಮುಳುಗಡೆಗೊಂಡ ಬಿದರಳ್ಳಿ ಗುಮ್ಮಗೋಳ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳು ದೊರೆತಿಲ್ಲ. ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳು ಹದಗೆಟ್ಟು ಹೋಗಿದ್ದು, ಸಮಸ್ಯೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ತಾಲೂಕಿನಲ್ಲಾದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಕುರಿತಂತೆ ಚರ್ಚಿಸಿ, ಹಾಳಾಗಿರುವ ಬೆಳೆಗಳ ಪರಿಹಾರದ ವರದಿ ಪರಿಶೀಲಿಸಲಾಯಿತು.ಶಾಸಕರಾದ ಜಿ.ಎಸ್. ಪಾಟೀಲ ಮಾತನಾಡಿ, ತಾಲೂಕಿನಲ್ಲಿ ಒಟ್ಟು ಎಷ್ಟು ಮಳೆ ಮಾಪನ ಕೇಂದ್ರಗಳಿವೆ, ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿನ ಮಳೆ ಮಾಪನ ಕೇಂದ್ರಗಳು ಕಾರ್ಯ ನಿರ್ವಹಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪಪ್ಪಾಯಿ ಬೆಳೆಗಳಿಗೆ ಪರಿಹಾರ ನೀಡದಿರುದನ್ನ ತಿಳಿದು ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಶಾಸಕ ಚಂದ್ರು ಲಮಾಣಿ ಪ್ರಶ್ನಿಸಿದರು.
ಕಳೆದ ಬಾರಿ ತಾಲೂಕಿನಲ್ಲಿ SSLC ಫಲಿತಾಂಶ ಕಡಿಮೆ ಇದ್ದು, ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ನೀಡುವಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಶ್ರಮವಹಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಭೆಯಲ್ಲಿ ತಿಳಿಸಲಾಯಿತು.ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಪ್ರಗತಿ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಈ ವೇಳೆ, ಮುಂಡರಗಿ ತಹಶೀಲ್ದಾರ ಪಿ.ಎಸ್.ಯರ್ರಿಸ್ವಾಮಿ, ತಾ.ಪಂ.ಇಒ ವಿಶ್ವನಾಥ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.