ಯಲ್ಲಾಪುರ: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಘಟ್ಟ (ರಾಷ್ಟ್ರೀಯ ಹೆದ್ದಾರಿ 63) ಭಾಗದಲ್ಲಿ ಈ ದುರ್ಘಟನೆ ನಡೆದಿದ್ದು,ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಹಾವೇರಿ ಜಿಲ್ಲೆಯ ಸವಣೂರಿನಿಂದ ತರಕಾರಿ ತುಂಬಿಕೊಂಡು ಕುಮಟಾಗೆ ತೆರಳುತ್ತಿತ್ತು.ಪ್ರತಿದಿನ ಹೊನ್ನಾವರ, ಕುಮುಟಾ ಭಾಗದಲ್ಲಿ ಇವರು ತರಕಾರಿ ವ್ಯಾಪಾರಕ್ಕಾಗಿ ತೆರಳುತ್ತಿದ್ದರು ಎನ್ನಲಾಗಿದೆ. ಇನ್ನು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಅಪಘಾತದಲ್ಲೂ ಮಂತ್ರಾಲಯದ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳು ಸೇರಿ ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಸಿಎಂ ಸಂತಾಪ!
ಉ.ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ಸಿಎಂ ಟ್ವಿಟ್ ಮಾಡಿದ್ದು, ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿ ಸಿಎಂ, ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.