ಧಾರವಾಡ:
ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಈ ಅಪಘಾತ ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ, ಭದ್ರಾಪುರ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಹುಬ್ಬಳ್ಳಿಗೆ ಹೊರಟಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರು ನಿಂತಿದ್ದ ಲಾರಿಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ.

ಮೇಲಿನ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಸಂಪೂರ್ಣ ಮಾಹಿತಿ ಒದಗುತ್ತದೆ.
ಡಿಕ್ಕಿಯ ತೀವ್ರತೆ ಹೆಚ್ಚು ಆಗಿದ್ದರಿಂದ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನೊಳಗಿದ್ದ ಮೂವರು ವ್ಯಕ್ತಿಗಳು ತಕ್ಷಣವೇ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ಲಭಿಸುತ್ತಿದ್ದಂತೆಯೇ ಅಣ್ಣಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳದಲ್ಲಿ ಸಾರ್ವಜನಿಕರು ಕೂಡ ಜಮಾಯಿಸಿ ಘಟನೆ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಮಾರ್ಗದಲ್ಲಿ ಅತೀವೇಗವಾಗಿ ವಾಹನ ಚಲಾಯಿಸುವ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಸುರಕ್ಷಿತವಾಗಿ ವಾಹನ ಓಡಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.
