ಗದಗ:
ಲಕ್ಷ್ಮೇಶ್ವರ ತಾಲೂಕಿನ ಗೋಜನೂರು ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಗಡಿಗೆ ಒಡೆಯುವ ಸಂಭ್ರಮ ಹಾಗೂ ಆರ್ಕೆಸ್ಟ್ರಾ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಗದಗ ತಾಲ್ಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ.
🖋ವರದಿ: ಮಹಲಿಂಗೇಶ ಹಿರೇಮಠ.ಗದಗ
ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದವರಾದ ಇವರೆಲ್ಲರೂ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಗೋಜನೂರಿನಲ್ಲಿ ಹೋಳಿ ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಂಡು ವಾಪಸ್ ಬರುತ್ತಿದ್ದ ವೇಳೆ, ನಿನ್ನೆ ತಡರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ವಾಹನದಲ್ಲಿದ್ದ ಒಟ್ಟು 10 ಪ್ರಯಾಣಿಕರಲ್ಲಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ನಿಂಗಪ್ಪ ಹನುಮಂತ ಯಳವತ್ತಿ (36) ಹಾಗೂ ಮುತ್ತಪ್ಪ ಶಂಕ್ರಪ್ಪ ಸತ್ತಿಗೇರಿ (35) ಎಂದು ಗುರುತಿಸಲಾಗಿದ್ದು, ಇಬ್ಬರೂ ಹಿರೇಕೊಪ್ಪ ಗ್ರಾಮದ ನಿವಾಸಿಗಳಾಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಉಳಿದ ಎಂಟು ಮಂದಿಯನ್ನು ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗದಗ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಪಘಾತಕ್ಕೆ ಅತಿವೇಗ ಅಥವಾ ನಿದ್ದೆ ಮಂಪರಿನ ನಿರ್ಲಕ್ಷ್ಯ ಚಾಲನೆಯೇ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಹೋಳಿ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿದ್ದ ಯುವಕರ ಈ ಅಕಾಲಿಕ ಮರಣದಿಂದ ಹಿರೇಕೊಪ್ಪ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಶೋಕದ ವಾತಾವರಣ ಆವರಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
